ಪಶುಸಂಗೋಪನೆ ಕ್ಷೇತ್ರ ಅಭಿವೃದ್ದಿಯತ್ತ ಸರ್ಕಾರದ ಗಮನ

0

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2023 – 24ನೇ ಹಣಕಾಸು ವರ್ಷದ ಪೂರಕ ಬಜೆಟ್  ಮಂಡನೆಯಾಗಿದೆ. ಪಶುಸಂಗೋಪನೆ ಕ್ಷೇತ್ರ ಅಭಿವೃದ್ದಿಗೆ  ಅಗತ್ಯವಾದ ಹಣಕಾಸು  ಒದಗಿಸಲಾಗಿದೆ.  ಈ ಕುರಿತಂತೆ ಬಜೆಟ್ ಭಾಷಣದಲ್ಲಿ ಅವರು ಹೇಳಿರುವ ಅಂಶಗಳು ನಿಮ್ಮ ಮುಂದೆ ಇದೆ.

ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ‘ಅನುಗ್ರಹ’ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಹಿಂದಿನ (ಬಿಜೆಪಿ ) ಸರ್ಕಾರ ಅದನ್ನು ನಿರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು.

ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆ ಎಂಬ ಧೈಯವಾಕ್ಯ ಹೊಂದಿರುವ ‘ನಂದಿನಿ’ಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇ.5 ರಿಂದ ಶೇ.7 ಇಳಿಕೆಯಾಗಿರುತ್ತದೆ. ಉತ್ತಮ ಹಾಲು ಅಭಿವೃದ್ಧಿಪಡಿಸುವ ಹಾಗೂ ನೀಡುವ ತಳಿಗಳನ್ನು ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು.

ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಮರಣ ಹೊಂದಿರುತ್ತವೆ. ಈ ಪೈಕಿ ಒಟ್ಟು 25,859 ಮರಣ ಹೊಂದಿದ ಜಾನುವಾರುಗಳಿಗೆ 53 ಕೋಟಿ ರೂ. ಪರಿಹಾರಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಮರಣಹೊಂದಿದ ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗುವುದು.

ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು

LEAVE A REPLY

Please enter your comment!
Please enter your name here