ಕರ್ನಾಟಕ ಕರಾವಳಿ ಪ್ರದೇಶ, ಮಲೆನಾಡು ಪ್ರದೇಶ ಸೇರಿದಂತೆ ಭಾರಿ ಮಳೆಯಾಗುತ್ತಿದೆ. ಬುಧವಾರ ಜುಲೈ 31ರಂದು ಭಾರಿಯಿಂದ ಅತೀ ಭಾರಿ ಮಳೆ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್, ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚಿಸಲಾಗಿದೆ. ದಕ್ಷಿಣ ಕನ್ನದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು NDRF ಮತ್ತು ಅಗ್ನಿಶಾಮಕ ದಳವನ್ನು ನಿಯೋಜಿಸಲಾಗಿದೆ
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗುಗಳಲ್ಲಿ ಭಾರಿಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿದಿದೆ. ಹಲವು ಪ್ರದೇಶ ಜಲಾವೃತವಾಗಿದೆ. ನೇತ್ರಾವತಿ ನದಿಯ ಪ್ರವಾಹದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮನೆಗಳು ಸಹ ಜಲಾವೃತವಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ದಳದ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ.
ದಕ್ಷಿಣ ಕನ್ನಡ ವಿಪತ್ತು ನಿರ್ವಹಣಾ ತಂಡವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಗೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 106 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಐವರು ಗಾಯಗೊಂಡಿದ್ದಾರೆ ನೂರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸಂತ್ರಸ್ತರಿಗಾಗಿ ರಾಜ್ಯ ಸರ್ಕಾರ ಪರಿಹಾರ ಶಿಬಿರಗಳನ್ನು ತೆರೆದಿದೆ.