ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2023 – 24ನೇ ಹಣಕಾಸು ವರ್ಷದ ಪೂರಕ ಬಜೆಟ್ ಮಂಡನೆಯಾಗಿದೆ. ಕೃಷಿ, ತೋಟಗಾರಿಕೆ, ನೀರಾವರಿ ಕ್ಷೇತ್ರಗಳ ಬಲವರ್ಧನೆಗೆ ಅಗತ್ಯವಾದ ಹಣಕಾಸನ್ನು ಅವರು ಒದಗಿಸಿರುವುದು ಗಮನಾರ್ಹ. ಈ ಕುರಿತಂತೆ ಬಜೆಟ್ ಭಾಷಣದಲ್ಲಿ ಅವರು ಹೇಳಿರುವ ಅಂಶಗಳು ನಿಮ್ಮ ಮುಂದೆ ಇದೆ.
ಕೃಷಿ ಕ್ಷೇತ್ರ
ಎತ್ತೆಮ್ಮೆ ಹೂಡುವುದು!
ಉತ್ತೊಮ್ಮೆ ಹರಗುವುದು
ಬಿತ್ತೊಮ್ಮೆ ಹರಗಿ, ಕಳೆತೆಗೆದರಾ ಬೆಳೆಯು
ಎತ್ತುಗೈಯುವ ಸರ್ವಜ್ಞ
ಎಂದಿರುವ ಶರಣ ಸರ್ವಜ್ಞರ ವಚನದೊಂದಿಗೆ ಕೃಷಿಗೆ ಸಂಬಂಧಿಸಿದ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ
ಕಾಂಗ್ರೆಸ್ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.
ಅಂತಾರಾಷ್ಟ್ರೀಯ ಮಾರುಕಟ್ಟೆ
ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ‘ನಂದಿನಿ’ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬಾಂಕುಗಳು ನೀಡುವ ತಲಾ 20 ಲಕ ರೂ ವರೆಗಿನ ಕಾಲಕ ಶೇ 4 ರ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ ಮೂಲಧನ (Seed Capital) ಒದಗಿಸಲಾಗುವುದು.
ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ. ಒದಗಿಸಲಾಗುವುದು.
ಕೃಷಿ ಯಂತ್ರಧಾರೆ ಕೇಂದ್ರ
ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು.
ತೋಟಗಾರಿಕೆ ಕ್ಷೇತ್ರ
ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರತ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2023-24ನೇ ಸಾಲಿನಲ್ಲಿ ಐದು ಕೋಟಿ ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು.
ಕಾಫಿ ವೈವಿಧ್ಯ
ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗುವುದು.
ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.
ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ‘ವಿದ್ಯಾರ್ಥಿಗಳಿಗಾಗಿ ಯೋಜನೆ” ಯನ್ನು ಜಾರಿಗೊಳಿಸಲಾಗುವುದು.
ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.
ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ, ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಲಾಗಿದೆ.
ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟಿನಲ್ಲಿ ಹೇಳಿರುವ ಯೋಜನೆಗಳು ಕಾಲಮಿತಿಯಲ್ಲಿ ದಕ್ಷತೆಯಿಂದ ಜಾರಿಗೊಂಡಲ್ಲಿ ಕ್ರಾಂತಿಕಾರಕ ಬದಲಾವಣೆ, ಅಭಿವೃದ್ಧಿ ಸಾಧ್ಯವಾಗಲಿದೆ. ರಾಜ್ಯದ ರೈತರ ಮೊಗಗಳಲ್ಲಿ ಸಂತಸ ಅರಳಲಿದೆ